ಕಡಬ: ರಸ್ತೆ ಕಾಮಗಾರಿ ನಡೆಯುತ್ತಿದ್ದ ಸಂದರ್ಭ ವಿರೋಧ ವ್ಯಕ್ತಪಡಿಸಿದ ಮಹಿಳೆಗೆ ಜಾತಿನಿಂದನೆ ಮಾಡಿ ಹಲ್ಲೆ ನಡೆಸಿದ ಆರೋಪದಡಿ ನಾಲ್ವರ ವಿರುದ್ಧ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಡಬ ಕುಟ್ರುಪ್ಪಾಡಿ ನಿವಾಸಿ ಮೋನಮ್ಮ (55) ಅವರು ನೀಡಿದ ದೂರಿನ ಪ್ರಕಾರ, ಅವರು ದಿನಾಂಕ 08-04-2026ರಂದು ಕೂಲಿ ಕೆಲಸ ಮಾಡುತ್ತಿದ್ದ ಮನೆಯ ಸಮೀಪದ ರಸ್ತೆಯಲ್ಲಿ JCB ಮೂಲಕ ಕಾಮಗಾರಿ ನಡೆಯುತ್ತಿದ್ದು, ಇದರಿಂದ ರಸ್ತೆಗೆ ಹಾನಿಯಾಗುತ್ತಿರುವುದನ್ನು ಗಮನಿಸಿ ಸ್ಥಳಕ್ಕೆ ತೆರಳಿ ಜಾಗದ ಮಾಲಿಕರ ಸಮ್ಮುಖದಲ್ಲಿ ಕೆಲಸ ನಡೆಸುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ.
ಈ ವೇಳೆ ಅಲ್ಲಿದ್ದ ಆರೋಪಿಗಳಾದ ರುಕ್ಮಯ್ಯ, ನೊಣಯ್ಯ, ಬಾಲಕೃಷ್ಣ ಹಾಗೂ ಹರಿಪ್ರಸಾದ್ ಅವರು ಮೋನಮ್ಮ ಅವರಿಗೆ ಅವಾಚ್ಯ ಶಬ್ದಗಳಿಂದ ಬೈದು, ಜಾತಿನಿಂದನೆ ಮಾಡಿ, ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.ಈ ಸಂಬಂಧ ಕಡಬ ಪೊಲೀಸ್ ಠಾಣೆಯಲ್ಲಿ ಅ.ಕ್ರ.44/2026ರಂತೆ ಪ್ರಕರಣ ದಾಖಲಿಸಿಕೊಂಡು, SC/ST ದೌರ್ಜನ್ಯ ತಡೆ ಕಾಯ್ದೆ ಹಾಗೂ BNS ವಿವಿಧ ಕಲಂಗಳಡಿ ತನಿಖೆ ಮುಂದುವರಿಸಲಾಗಿದೆ.
