ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯ (PDO) ಕಿರುಕುಳ ಆರೋಪಕ್ಕೆ ಸಂಬಂಧಿಸಿದಂತೆ ಗ್ರಾಮ ಪಂಚಾಯಿತಿ ಬಿಲ್ ಕಲೆಕ್ಟರ್ ಒಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ.
ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಬಿಳಿಚೋಡು ಗ್ರಾಮ ಪಂಚಾಯಿತಿಯ ಬಿಲ್ ಕಲೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಶಿವಪ್ಪ (51) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಬಿಳಿಚೋಡು ಗ್ರಾಮದ ತಮ್ಮ ನಿವಾಸದಲ್ಲಿ ಶಿವಪ್ಪ ಅವರು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಆತ್ಮಹತ್ಯೆಗೂ ಮುನ್ನ ಶಿವಪ್ಪ ಅವರು ಡೆತ್ ನೋಟ್ ಬರೆದಿಟ್ಟಿದ್ದಾರೆ ಎನ್ನಲಾಗಿದ್ದು, ಅದರಲ್ಲಿ ಗ್ರಾಮ ಪಂಚಾಯಿತಿಯ ಪಿಡಿಒ ನೀಡುತ್ತಿದ್ದ ಮಾನಸಿಕ ಕಿರುಕುಳವೇ ತಮ್ಮ ಈ ನಿರ್ಧಾರಕ್ಕೆ ಕಾರಣ ಎಂದು ಉಲ್ಲೇಖಿಸಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಡೆತ್ ನೋಟ್ ಅನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಕುರಿತು ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಮುಂದುವರಿದಿದೆ.
