ಮಂಗಳೂರು: ನ್ಯಾಯಾಲಯದ ಪ್ರಕ್ರಿಯೆ ಹಾಗೂ ಪ್ರಕರಣದ ತನಿಖೆಯ ಕುರಿತು ಉದ್ದೇಶಪೂರ್ವಕವಾಗಿ ಸುಳ್ಳು ಮಾಹಿತಿ ನೀಡಿ ನ್ಯಾಯಾಂಗ ವ್ಯವಸ್ಥೆಯನ್ನು ಅಪಮಾನಿಸಿದ ಆರೋಪದ ಹಿನ್ನೆಲೆಯಲ್ಲಿ ವಕೀಲರಾದ ಪ್ರಸಾದ್ ಎಂಬವರ ವಿರುದ್ಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಂಟ್ವಾಳ ಬಡಗಬೆಳ್ಳೂರು ನಿವಾಸಿ ಹನೀಫ್ @ ಮಹಮ್ಮದ್, ಹನೀಫ್ (43) ಎಂಬುವವರು ನೀಡಿದ ದೂರಿನ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ.
ಘಟನೆಯ ಹಿನ್ನೆಲೆ:
ಬಂಟ್ವಾಳ ನಗರ ಠಾಣಾ ವ್ಯಾಪ್ತಿಯ ಬಿ.ಸಿ. ರೋಡ್ನಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ವಕೀಲ ಪ್ರಸಾದ್ ಭಾಷಣ ಮಾಡಿದ್ದರು. ಧಾರ್ಮಿಕ ಸಂಘಟನೆಯೊಂದರ ನೇತೃತ್ವದಲ್ಲಿ ಆಯೋಜಿಸಲಾಗಿದ್ದ ಈ ಸಭೆಯಲ್ಲಿ ಮಾತನಾಡುತ್ತಾ ಅವರು, ನ್ಯಾಯಾಲಯದ ಪ್ರಕ್ರಿಯೆ ಹಾಗೂ ತನಿಖೆಯ ಬಗ್ಗೆ ಸತ್ಯಕ್ಕೆ ದೂರವಾದ ಸುಳ್ಳು ಹೇಳಿಕೆಗಳನ್ನು ನೀಡಿ ನ್ಯಾಯಾಂಗ ವ್ಯವಸ್ಥೆಗೆ ಅಪಮಾನ ಉಂಟುಮಾಡಿದ್ದಾರೆ ಎಂದು ದೂರಿನಲ್ಲಿ ಗಂಭೀರ ಆರೋಪ ಮಾಡಲಾಗಿದೆ.
ಈ ಕುರಿತು ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದೂರರ್ಜಿ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಮುಂದಿನ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ















