ಕಲಬುರಗಿ: ಲಂಚ ಸ್ವೀಕರಿಸುತ್ತಿದ್ದ ವೇಳೆ ಪ್ರಥಮ ದರ್ಜೆ ಸಹಾಯಕ ರೆಡ್ಹ್ಯಾಂಡ್ ಆಗಿ ಲೋಕಾಯುಕ್ತ ಪೊಲೀಸರ ಬಲೆಗೆ ಸಿಕ್ಕಿಬಿದ್ದ ಘಟನೆ ಕಮಲಾಪುರ ತಹಶೀಲ್ದಾರ್ ಕಚೇರಿಯಲ್ಲಿ ಶನಿವಾರ ನಡೆದಿದೆ. ಬಂಧಿತನನ್ನು ಕಮಲಾಪುರ ತಹಶೀಲ್ದಾರ್ ಕಾರ್ಯಾಲಯದಲ್ಲಿ ಎಫ್ಡಿಎ ಆಗಿ ಕಾರ್ಯನಿರ್ವಹಿಸುತ್ತಿದ್ದ ಶಶಿಕಾಂತ್ ಜಂಜೀರ್ ಎಂದು ಗುರುತಿಸಲಾಗಿದೆ.
ಮಾಹಿತಿಯಂತೆ, ತಹಶೀಲ್ದಾರ್ ಅವರು ನಡೆಸಿದ ಸಿವಿಲ್ ವ್ಯಾಜ್ಯಕ್ಕೆ ಸಂಬಂಧಿಸಿದ ಆದೇಶ ಪ್ರತಿ ನೀಡಲು ಫಲಾನುಭವಿಗಳಿಂದ ₹10,000 ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಹಣ ನೀಡುವಂತೆ ನಿರಂತರವಾಗಿ ಒತ್ತಾಯಿಸಿದ್ದರಿಂದ ಕಿಶನ್ ರಾಠೋಡ್ ಎಂಬವರು ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದರು.
ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಸಿದ್ದರಾಜು ಸಿ. ಅವರ ಮಾರ್ಗದರ್ಶನದಲ್ಲಿ, ತನಿಖಾಧಿಕಾರಿ ಪೊಲೀಸ್ ಇನ್ಸ್ಪೆಕ್ಟರ್ ಅರುಣ್ ಕುಮಾರ್ ಮುರಗುಂಡಿ ನೇತೃತ್ವದ ತಂಡ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದೆ. ಬಳಿಕ ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
