ಅಸ್ತಿತ್ವದಲ್ಲೇ ಇಲ್ಲದ ಆಡಳಿತ ಮಂಡಳಿಗಳ ಹೆಸರಿನಲ್ಲಿ ಅಕ್ರಮವಾಗಿ ಶಾಲೆಗಳನ್ನು ನಡೆಸುತ್ತಿರುವ ಹಾಗೂ ಅನುದಾನ ದುರ್ಬಳಕೆ ಮಾಡಿಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಗ್ರ ತನಿಖಾ ವರದಿ ಮತ್ತು ಕೈಗೊಂಡ ಕ್ರಮಗಳ ವಿವರ ನೀಡುವಂತೆ ಕರ್ನಾಟಕ ಹೈಕೋರ್ಟ್ ಕಟ್ಟುನಿಟ್ಟಿನ ಆದೇಶ ನೀಡಿದೆ.
ಮುಂದಿನ ವಿಚಾರಣೆ ವೇಳೆಗೆ ಈ ಬಗ್ಗೆ ಸೂಕ್ತ ಮಾಹಿತಿ ಸಲ್ಲಿಸದಿದ್ದರೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ನಿರ್ದೇಶಕರು ನ್ಯಾಯಾಲಯದ ಮುಂದೆ ಖುದ್ದು ಹಾಜರಿರಬೇಕಾಗುತ್ತದೆ ಎಂದು ನ್ಯಾಯಪೀಠ ಎಚ್ಚರಿಕೆ ನೀಡಿದೆ.
ಬೆಂಗಳೂರಿನಲ್ಲಿ ನಕಲಿ ಹೆಸರುಗಳಲ್ಲಿ ಶಿಕ್ಷಣ ಸಂಸ್ಥೆಗಳನ್ನು ನಡೆಸುತ್ತಿರುವ ಕುರಿತು ಬಂದ ದೂರುಗಳ ಹಿನ್ನೆಲೆಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಆಯುಕ್ತರು ಕೂಲಂಕಷ ತನಿಖೆ ನಡೆಸಿದ್ದರು. ತನಿಖೆಯಲ್ಲಿ ನಡೆದ ಅಕ್ರಮಗಳು ಸಾಬೀತಾದ ಕಾರಣ ಕರ್ನಾಟಕ ಶಿಕ್ಷಣ ಕಾಯ್ದೆ 1983ರ ಸೆಕ್ಷನ್ 39ರ ಅನ್ವಯ 2025ರ ಮೇ 30ರಂದೇ ಸದರಿ ಶಾಲೆಗಳ ಮಾನ್ಯತೆಯನ್ನು ರದ್ದುಗೊಳಿಸಲಾಗಿತ್ತು. ಈ ಆದೇಶವನ್ನು ಪ್ರಶ್ನಿಸಿ ಅಲ್ ಜಾಮಿಯಾ ಮೊಹಮ್ಮದಿಯಾ ಎಜುಕೇಷನ್ ಸೊಸೈಟಿ ಸಲ್ಲಿಸಿದ್ದ ಮೇಲ್ಮನವಿ ಹಾಗೂ ನಂತರ ಹೈಕೋರ್ಟ್ ಏಕಸದಸ್ಯ ಪೀಠಕ್ಕೆ ಸಲ್ಲಿಸಲಾಗಿದ್ದ ರಿಟ್ ಅರ್ಜಿಯೂ ವಜಾಗೊಂಡಿದ್ದರಿಂದ ಮಾನ್ಯತೆ ರದ್ದತಿ ಆದೇಶ ಅಂತಿಮಗೊಂಡಿತ್ತು.
ನ್ಯಾಯಾಲಯದ ನಿರ್ದೇಶನದಂತೆ ಅಲ್ಪಸಂಖ್ಯಾತರ ನಿರ್ದೇಶನಾಲಯದ ಸಹಾಯಕ ನಿರ್ದೇಶಕರು ಸಲ್ಲಿಸಿದ ಪ್ರಮಾಣಪತ್ರದಲ್ಲಿ ಮಹತ್ವದ ಮಾಹಿತಿ ಬಹಿರಂಗವಾಗಿದೆ. ಸಂಸ್ಥೆಯ ವಿರುದ್ಧದ ದೂರುಗಳು ಪರಿಶೀಲನೆ ವೇಳೆ ದೃಢಪಟ್ಟಿರುವ ಕಾರಣ, ಬಿಡುಗಡೆಯಾಗಿದ್ದ 5 ಲಕ್ಷ ರೂಪಾಯಿ ಮೊತ್ತವನ್ನು ನಿಯಮಾನುಸಾರ ವಸೂಲಿ ಮಾಡಿ ಸರ್ಕಾರಕ್ಕೆ ಜಮೆ ಮಾಡಲು ಅನುಮತಿ ಕೋರಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಗಳು 2026ರ ಆಗಸ್ಟ್ 20ರಂದು ಅಲ್ಪಸಂಖ್ಯಾತರ ಕಲ್ಯಾಣ ನಿರ್ದೇಶನಾಲಯದ ನಿರ್ದೇಶಕರಿಗೆ ಪತ್ರ ಬರೆದಿರುವುದು ನ್ಯಾಯಪೀಠದ ಗಮನಕ್ಕೆ ಬಂದಿದೆ.
ಈ ಪತ್ರದ ಹಿನ್ನೆಲೆಯಲ್ಲಿ ನಿರ್ದೇಶಕರು ಕೈಗೊಂಡಿರುವ ಕ್ರಮಗಳ ಸಂಪೂರ್ಣ ವಿವರವನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ಹೆಚ್ಚುವರಿ ಸರ್ಕಾರಿ ವಕೀಲರಿಗೆ ನ್ಯಾಯಮೂರ್ತಿ ಜಯಂತ್ ಬ್ಯಾನರ್ಜಿ ಹಾಗೂ ನ್ಯಾಯಮೂರ್ತಿ ಟಿ.ಎಂ. ನಡಾಫ್ ಅವರಿದ್ದ ವಿಭಾಗೀಯ ಪೀಠ ಸೂಚಿಸಿದೆ. ವಂಚನೆಯ ಮೂಲಕ ನಡೆಯುತ್ತಿರುವ ಇಂತಹ ಸಂಸ್ಥೆಗಳ ವಿರುದ್ಧ ಕೈಗೊಂಡ ಕ್ರಮಗಳ ಸ್ಪಷ್ಟ ವರದಿಯನ್ನು ಸಲ್ಲಿಸದಿದ್ದಲ್ಲಿ, ಆರೋಪ ಹೊರಿಸುವ (Framing of charge) ಪ್ರಕ್ರಿಯೆಯ ವಿಚಾರಣೆಗಾಗಿ ನಿರ್ದೇಶಕರು ಸ್ವತಃ ನ್ಯಾಯಾಲಯಕ್ಕೆ ಹಾಜರಾಗಬೇಕಾಗುತ್ತದೆ ಎಂದು ಸ್ಪಷ್ಟಪಡಿಸಿರುವ ನ್ಯಾಯಪೀಠ, ಪ್ರಕರಣದ ವಿಚಾರಣೆಯನ್ನು ಸೆಪ್ಟೆಂಬರ್ 24ಕ್ಕೆ ಮುಂದೂಡಿದೆ.















