ರಾಜ್ಯದ ಸರ್ಕಾರಿ ಶಾಲಾ ಮಕ್ಕಳಿಗೆ ಪ್ರಸ್ತುತ ಸಾಲಿನಲ್ಲಿ ವಿತರಿಸಲಾಗಿರುವ ಶೂಗಳು ಅತ್ಯಂತ ಕಳಪೆ ಗುಣಮಟ್ಟದಿಂದ ಕೂಡಿದ್ದು, ಇದರಲ್ಲಿ ಭ್ರಷ್ಟಾಚಾರ ನಡೆದಿರುವ ಗಂಭೀರ ಆರೋಪಗಳು ಕೇಳಿಬಂದಿರುವ ಹಿನ್ನೆಲೆಯಲ್ಲಿ ಕರ್ನಾಟಕ ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಅವರು ಸ್ವಯಂ ಪ್ರೇರಿತ (Suo-moto) ದೂರು ದಾಖಲಿಸಿಕೊಂಡಿದ್ದಾರೆ. ಅಲ್ಲದೆ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾಥಮಿಕ ತನಿಖೆ ನಡೆಸಿ ಎರಡು ವಾರಗಳ ಒಳಗೆ ವರದಿ ಸಲ್ಲಿಸುವಂತೆ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಿಗೆ ಕಟ್ಟುನಿಟ್ಟಿನ ಆದೇಶ ನೀಡಿದ್ದಾರೆ.
ರಾಜ್ಯದ ವಿವಿಧ ದಿನಪತ್ರಿಕೆಗಳಲ್ಲಿ ವರದಿಯಾದಂತೆ, ಸರ್ಕಾರಿ ಶಾಲೆಗಳ ಮಕ್ಕಳಿಗೆ ವಿತರಿಸಲಾದ ಶೂಗಳು ಬಳಸಿದ ಒಂದೇ ವಾರದಲ್ಲಿ ಹರಿದು ಹೋಗುತ್ತಿವೆ ಅಥವಾ ಕಾಲಿಗೆ ಹಾಕಿದ ಕೆಲವೇ ನಿಮಿಷಗಳಲ್ಲಿ ಹೊಲಿಗೆಗಳು ಕಿತ್ತು ಬರುತ್ತಿವೆ. ಕಳೆದ ವರ್ಷಕ್ಕಿಂತಲೂ ಈ ಬಾರಿ ವಿತರಿಸಲಾದ ಶೂಗಳು ತೀರಾ ಕಳಪೆಯಾಗಿದ್ದು, ಖರೀದಿ ಮತ್ತು ವಿತರಣೆ ಪ್ರಕ್ರಿಯೆಯಲ್ಲಿ ಭಾರೀ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಲಾಗಿತ್ತು. ಈ ವಿಷಯವು ವಿದ್ಯಾರ್ಥಿಗಳಿಗೆ ಮೂಲಭೂತ ಸೌಕರ್ಯ ಒದಗಿಸುವ ಸಾಂವಿಧಾನಿಕ ಹಕ್ಕಿಗೆ ಸಂಬಂಧಿಸಿದ್ದಾಗಿದ್ದು, ಇದು ಭಾರತ ಸಂವಿಧಾನದ 21ಎ ವಿಧಿಯ ಉಲ್ಲಂಘನೆ ಹಾಗೂ ಸರ್ವೋಚ್ಚ ನ್ಯಾಯಾಲಯದ ತೀರ್ಪುಗಳಿಗೆ ವ್ಯತಿರಿಕ್ತವಾಗಿದೆ ಎಂಬುದು ಮೇಲ್ನೋಟಕ್ಕೆ ಕಂಡುಬಂದಿದೆ ಎಂದು ಉಪಲೋಕಾಯುಕ್ತರು ಗಂಭೀರವಾಗಿ ಪರಿಗಣಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಉಪಲೋಕಾಯುಕ್ತ-1 ರವರ ವ್ಯಾಪ್ತಿಗೆ ಒಳಪಡುವ 15 ಜಿಲ್ಲೆಗಳ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು (ಡಿಡಿಪಿಐ) ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ (ಬಿಇಒ) ವಿರುದ್ಧ ಪ್ರತ್ಯೇಕ ದೂರುಗಳನ್ನು ದಾಖಲಿಸಿಕೊಳ್ಳಲಾಗಿದೆ. ಗದಗ, ಯಾದಗಿರಿ, ಮೈಸೂರು, ಬೆಂಗಳೂರು ದಕ್ಷಿಣ (ರಾಮನಗರ), ಕೊಡಗು, ಬೆಂಗಳೂರು ನಗರ, ಶಿವಮೊಗ್ಗ, ಚಿಕ್ಕಬಳ್ಳಾಪುರ, ಉತ್ತರ ಕನ್ನಡ, ಚಾಮರಾಜನಗರ, ಚಿತ್ರದುರ್ಗ, ಚಿಕ್ಕಮಗಳೂರು, ವಿಜಯಪುರ ಹಾಗೂ ಧಾರವಾಡ ಜಿಲ್ಲೆಗಳು ಈ ತನಿಖಾ ವ್ಯಾಪ್ತಿಗೆ ಒಳಪಟ್ಟಿವೆ.















