ಉಡುಪಿ: ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಿನಲ್ಲಿ ಉದ್ಯಮಿಗಳಿಗೆ ಅಂತರರಾಷ್ಟ್ರೀಯ ದೂರವಾಣಿ ಸಂಖ್ಯೆಗಳಿಂದ ಕರೆ ಮಾಡಿ ಕೋಟ್ಯಂತರ ರೂಪಾಯಿ ಹಣಕ್ಕೆ ಬೇಡಿಕೆ ಇಟ್ಟು, ಹಣ ನೀಡದಿದ್ದರೆ ಕೊಲೆ ಮಾಡುವುದಾಗಿ ಜೀವ ಬೆದರಿಕೆ ಹಾಕುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಬಂಧಿಸಲಾಗಿದೆ.
ಹೇಮಂತ್ ಪೂಜಾರಿಗೆ ಶ್ರೀಮಂತ ಉದ್ಯಮಿಗಳ ಮೊಬೈಲ್ ಸಂಖ್ಯೆಗಳನ್ನು ಒದಗಿಸುತ್ತಿದ್ದ ಆರೋಪದ ಮೇಲೆ ಸಾಂತೂರು ಗ್ರಾಮದ ಹರೀಶ್ ಪೂಜಾರಿ (45) ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ಮುದರಂಗಡಿ ಡೇವಿಡ್ ಡಿಸೋಜಾ ಕೊಲೆಯ ಬಳಿಕ ಭೂಗತ ಪಾತಕಿ ಹೇಮಂತ್ ಪೂಜಾರಿ ಉಡುಪಿ ಜಿಲ್ಲೆಯ ಪಡುಬಿದ್ರಿ, ಮಣಿಪಾಲ, ಕಾಪು ಹಾಗೂ ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ವ್ಯವಹಾರ ನಡೆಸುತ್ತಿರುವ ಉದ್ಯಮಿಗಳನ್ನು ಗುರಿಯಾಗಿಸಿಕೊಂಡಿದ್ದ ಎನ್ನಲಾಗಿದೆ. ಅಂತರರಾಷ್ಟ್ರೀಯ ದೂರವಾಣಿ ಸಂಖ್ಯೆಗಳಿಂದ ಕರೆ ಮಾಡಿ ಕೋಟ್ಯಂತರ ರೂಪಾಯಿ ಹಣಕ್ಕೆ ಬೇಡಿಕೆ ಇಡಲಾಗುತ್ತಿತ್ತು. ಹಣ ನೀಡದಿದ್ದಲ್ಲಿ ಶಿರ್ವದಲ್ಲಿ ಕೊಲೆಯಾದ ಡೇವಿಡ್ ಡಿಸೋಜಾ ಅವರ ರೀತಿಯಲ್ಲೇ ಕೊಲೆ ಮಾಡುವುದಾಗಿ ಬೆದರಿಕೆ ಹಾಕಲಾಗಿತ್ತು. ಈ ಸಂಬಂಧ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು 8 ಪ್ರಕರಣಗಳು ದಾಖಲಾಗಿದ್ದವು. ಈ ಪೈಕಿ ಶಿರ್ವ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣದ ತನಿಖೆ ಕೈಗೊಂಡ ಪೊಲೀಸರು ಹರೀಶ್ ಪೂಜಾರಿಯನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.















