ರಾಜ್ಯಾದ್ಯಂತ ನಡೆಯುತ್ತಿರುವ ಅಕ್ರಮ ಮರಳು ಗಣಿಗಾರಿಕೆ, ಸಂಗ್ರಹಣೆ ಹಾಗೂ ಸಾಗಾಣಿಕೆಯನ್ನು ಸಂಪೂರ್ಣವಾಗಿ ಮಟ್ಟಹಾಕಲು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಪೊಲೀಸ್ ಇಲಾಖೆಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದಾರೆ. ಸಚಿವರ ಸೂಚನೆಯ ಬೆನ್ನಲ್ಲೇ ರಾಜ್ಯ ಪೊಲೀಸ್ ಮಹಾನಿರ್ದೇಶಕರು (ಡಿಜಿ ಮತ್ತು ಐಜಿಪಿ) ರಾಜ್ಯದ ಎಲ್ಲಾ ಪೊಲೀಸ್ ಆಯುಕ್ತರು, ಪೊಲೀಸ್ ಮಹಾನಿರೀಕ್ಷಕರು, ಉಪ ಮಹಾನಿರೀಕ್ಷಕರು ಹಾಗೂ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಸಮಗ್ರ ಸುತ್ತೋಲೆಯನ್ನು ಹೊರಡಿಸಿದ್ದಾರೆ.
ಅಕ್ರಮ ಮರಳು ಗಣಿಗಾರಿಕೆಯು ನೈಸರ್ಗಿಕ ಪರಿಸರವನ್ನು ನಾಶಪಡಿಸುವುದಲ್ಲದೆ, ಕಾನೂನು ಸುವ್ಯವಸ್ಥೆ ಮತ್ತು ಸರ್ಕಾರದ ಖಜಾನೆಗೆ ಧಕ್ಕೆ ತರುತ್ತಿದೆ. ಹೀಗಾಗಿ ಇಂತಹ ಅಕ್ರಮಗಳ ವಿರುದ್ಧ ‘ಶೂನ್ಯ ಸಹಿಷ್ಣುತೆ (Zero Tolerance)’ ನೀತಿಯನ್ನು ಅನುಸರಿಸಲಾಗುತ್ತಿದ್ದು, ರಾಜ್ಯಾದ್ಯಂತ ಈ ಕಟ್ಟುನಿಟ್ಟಿನ ನಿಯಮಗಳನ್ನು ತಕ್ಷಣದಿಂದಲೇ ಜಾರಿಗೊಳಿಸಲು ಸೂಚಿಸಲಾಗಿದೆ.
ಪ್ರಿಯಾಂಕ್ ಖರ್ಗೆ ಹೇಳಿದ್ದೇನು?
“ಅಕ್ರಮ ಮರಳು ಗಣಿಗಾರಿಕೆ ಮತ್ತು ಸಾಗಾಣಿಕೆ ರಾಜ್ಯದ ನೈಸರ್ಗಿಕ ಸಂಪತ್ತಿನ ಲೂಟಿ ಮಾತ್ರವಲ್ಲ, ಇದು ಕಾನೂನು ಸುವ್ಯವಸ್ಥೆ ಹಾಗೂ ಸಾರ್ವಜನಿಕ ಹಿತಾಸಕ್ತಿಗೆ ಸವಾಲು ಎಸೆಯುವ ಗಂಭೀರ ಅಪರಾಧವಾಗಿದೆ. ಸರ್ಕಾರ ಯಾವುದೇ ಅಕ್ರಮ ಚಟುವಟಿಕೆಯನ್ನು ಸಹಿಸುವುದಿಲ್ಲ. ಕಾನೂನನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಿ, ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ಪೊಲೀಸ್ ಇಲಾಖೆಗೆ ಸ್ಪಷ್ಟ ನಿರ್ದೇಶನ ನೀಡಲಾಗಿದೆ. ಕಾನೂನಿಗಿಂತ ಯಾರೂ ದೊಡ್ಡವರಲ್ಲ. ಅಕ್ರಮ ಮರಳು ದಂಧೆಯಲ್ಲಿ ತೊಡಗಿರುವವರ ವಿರುದ್ಧ ಕಠಿಣ ಕ್ರಮ ಜರುಗಿಸುವುದರ ಜೊತೆಗೆ ಕರ್ತವ್ಯ ಲೋಪ ಎಸಗುವ ಅಧಿಕಾರಿಗಳ ವಿರುದ್ಧವೂ ನಿರ್ದಾಕ್ಷಿಣ್ಯ ಶಿಸ್ತು ಕ್ರಮ ಕೈಗೊಳ್ಳಲಾಗುವುದು.” – ಪ್ರಿಯಾಂಕ್ ಖರ್ಗೆ, ಗೃಹ ಸಚಿವರು
