ನವದೆಹಲಿ: ನೀಟ್ ಅಕ್ರಮದ ವಿರುದ್ಧ ದೆಹಲಿಯ ಜಂತರ್ ಮಂತರ್ ಸೇರಿ ರಾಜ್ಯದೆಲ್ಲೆಡೆ ಪ್ರತಿಭಟನೆಯಲ್ಲಿ ಭಾಗಿಯಾಗಿ ಬಂಧನಕ್ಕೊಳಗಾಗಿದ್ದ 18 ವರ್ಷದೊಳಗಿನ ವಿದ್ಯಾರ್ಥಿಗಳನ್ನು ಬಿಡುಗಡೆ ಮಾಡುವಂತೆ ಎಲ್ಲಾ ರಾಜ್ಯಗಳಿಗೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ. ಸುಪ್ರೀಂ ವಿದ್ಯಾರ್ಥಿಗಳನ್ನು ದಂಡನಾತ್ಮಕ ಕ್ರಮದಿಂದ ರಕ್ಷಿಸಿದೆ. ಮಂಗಳವಾರ, ಸುಪ್ರೀಂ ಕೋರ್ಟ್ ಕ್ರಿಮಿನಲ್ ದಾಖಲೆಗಳಿಲ್ಲದವರನ್ನು ಬಿಡುಗಡೆ ಮಾಡಲು ಆದೇಶಿಸಿದೆ.
ಕಾಕ್ರೋಚ್ ಜನತಾ ಪಾರ್ಟಿ ಹಾಗೂ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಸಂಭವಿಸಿದ ಹಿಂಸಾಚಾರ ಮತ್ತು ಪೊಲೀಸ್ ದೌರ್ಜನ್ಯದ ವಿರುದ್ಧ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಅತ್ಯಂತ ಮಹತ್ವದ ಆದೇಶ ಹೊರಡಿಸಿದೆ. ಈ ಪ್ರತಿಭಟನೆಗಳ ವೇಳೆ ಬಂಧನಕ್ಕೊಳಗಾಗಿರುವ 18 ವರ್ಷದೊಳಗಿನ ಎಲ್ಲಾ ವಿದ್ಯಾರ್ಥಿಗಳನ್ನು ತಕ್ಷಣವೇ ಬಿಡುಗಡೆ ಮಾಡುವಂತೆ ದೇಶದ ಎಲ್ಲಾ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ನೇತೃತ್ವದ ಪೀಠ ಸೂಚನೆ ನೀಡಿದೆ.
ಸಾಂವಿಧಾನಿಕ ಹಕ್ಕು:ಶಾಂತಿಯುತ ಮತ್ತು ಕಾನೂನುಬದ್ಧ ಪ್ರತಿಭಟನೆ ನಡೆಸುವುದು ಸಂವಿಧಾನ ನೀಡಿರುವ ಮೂಲಭೂತ ಹಕ್ಕು. ಶಾಂತಿಯುತ ಆಂದೋಲನ ನಡೆಯುತ್ತಿರುವಾಗ ಕೇವಲ ಪ್ರತಿಭಟನೆ ಎಂಬ ಕಾರಣಕ್ಕೆ ಪೊಲೀಸರು ಅತಿಯಾದ ಬಲಪ್ರಯೋಗ ಅಥವಾ ದೌರ್ಜನ್ಯ ಎಸಗಲು ಸಾಧ್ಯವಿಲ್ಲ ಎಂದು ಪೀಠ ಸ್ಪಷ್ಟಪಡಿಸಿದೆ.
