ಮಂಗಳೂರು: ಸಂಸ್ಥೆಯ ಆಂತರಿಕ ನಿಧಿ ದುರ್ಬಳಕೆ ಹಾಗೂ ನಂಬಿಕೆದ್ರೋಹ ಎಸಗಿದ ಆರೋಪದ ಮೇಲೆ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ (NIT) ಸುರತ್ಕಲ್‌ನ ಇಬ್ಬರು ಹಿರಿಯ ಪ್ರಾಧ್ಯಾಪಕರ ವಿರುದ್ಧ ಪೊಲೀಸ್ ದೂರು ದಾಖಲಾಗಿದ್ದು, ಇಬ್ಬರನ್ನೂ ವಶಕ್ಕೆ ಪಡೆಯಲಾಗಿದೆ.
NITK ಆಡಳಿತ ಮಂಡಳಿ ನೀಡಿದ ದೂರಿನನ್ವಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಸಂಸ್ಥೆಯಲ್ಲಿ ನಡೆದಿದೆ ಎನ್ನಲಾದ ಆರ್ಥಿಕ ಅಕ್ರಮಕ್ಕೆ ಸಂಬಂಧಿಸಿದಂತೆ ಎನ್‌ಐಟಿ ಮಂಡಳಿಯು ಮೊದಲು ಆಂತರಿಕ ತನಿಖೆ ನಡೆಸಿತ್ತು. ಈ ಪ್ರಾಥಮಿಕ ತನಿಖೆಯಲ್ಲಿ ಇಬ್ಬರು ಬೋಧಕರು ಅಧಿಕಾರ ದುರ್ಬಳಕೆ ಮಾಡಿಕೊಂಡು ಸಂಸ್ಥೆಯ ಹಣವನ್ನು ದುರ್ಬಳಕೆ ಮಾಡಿಕೊಂಡಿರುವುದು ದೃಢಪಟ್ಟಿತ್ತು.
ಆಂತರಿಕ ತನಿಖಾ ವರದಿ ಕೈಸೇರುತ್ತಿದ್ದಂತೆಯೇ ಸಾರ್ವಜನಿಕ ಸೇವಕರಾಗಿದ್ದುಕೊಂಡು ನಂಬಿಕೆದ್ರೋಹ ಎಸಗಿದ ಆರೋಪದ ಮೇಲೆ ಕಾನೂನು ರೀತ್ಯಾ ಕ್ರಿಮಿನಲ್ ಕ್ರಮ ಕೈಗೊಳ್ಳುವಂತೆ ಕೋರಿ ಎನ್‌ಐಟಿ ಅಧಿಕಾರಿಗಳು ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ದೂರು ಆಧರಿಸಿ ತನಿಖೆ ಕೈಗೆತ್ತಿಕೊಂಡ ಪೊಲೀಸರು, ಇಬ್ಬರೂ ಆರೋಪಿಗಳನ್ನು ವಶಕ್ಕೆ ಪಡೆದಿದ್ದು, ನ್ಯಾಯಾಂಗ ಬಂಧನಕ್ಕಾಗಿ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಎದುರು ಹಾಜರುಪಡಿಸಲಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ಮುಂದುವರಿದಿದೆ.















