ಮಂಗಳೂರು : ಮಂಗಳೂರು ಫಳ್ನೀರಿನ ಕಾರು ಆಲ್ಟ್ರೇಷನ್ ಸೆಂಟರ್ನಲ್ಲಿ ಸೋಮವಾರ ಬೆಳ್ಳಂಬೆಳಗ್ಗೆ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಸೊತ್ತುಗಳು ಹಾನಿಗೀಡಾಗಿದೆ.
ಶಾರ್ಟ್ ಸರ್ಕ್ಯೂಟ್ನಿಂದಾಗಿ ಈ ದುರಂತ ಸಂಭವಿಸಿದೆ ಎಂದು ಶಂಕಿಸಲಾಗಿದೆ. ಬೆಳಿಗ್ಗೆ ಸುಮಾರು 7:30ರ ವೇಳೆಗೆ ಮಳಿಗೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನೋಡನೋಡುತ್ತಿದ್ದಂತೆಯೇ ವ್ಯಾಪಕವಾಗಿ ಹರಡಿದ್ದು, ಪರಿಣಾಮವಾಗಿ, ಮಳಿಗೆ ಒಳಗಡೆ ಇರಿಸಲಾಗಿದ್ದ ಮೂರು ಕಾರುಗಳು ಬೆಂಕಿಗೆ ಆಹುತಿಯಾಗಿವೆ. ಅಲ್ಲದೆ, ಮಳಿಗೆಯಲ್ಲಿದ್ದ ಬೆಲೆಬಾಳುವ ಎಲೆಕ್ಟ್ರಾನಿಕ್ ಉಪಕರಣಗಳು ಮತ್ತು ಬಿಡಿಭಾಗಗಳು ಸುಟ್ಟು ಕರಕಲಾಗಿವೆ. ಮಳಿಗೆಯಿಂದ ದಟ್ಟವಾದ ಹೊಗೆ ಬರುತ್ತಿರುವುದನ್ನು ಗಮನಿಸಿದ ಸ್ಥಳೀಯರು ತಕ್ಷಣವೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಪಾಂಡೇಶ್ವರ ಅಗ್ನಿಶಾಮಕ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ, ಬೆಂಕಿ ಪಕ್ಕದ ಕಟ್ಟಡಗಳಿಗೆ ಹರಡದಂತೆ ತಡೆದು ನಂದಿಸುವಲ್ಲಿ ಯಶಸ್ವಿಯಾದರು. ಘಟನೆಯ ವೇಳೆ ಮಳಿಗೆಯಲ್ಲಿ ಯಾರೂ ಇಲ್ಲದ ಕಾರಣ ಪ್ರಾಣಾಪಾಯ ಸಂಭವಿಸಿಲ್ಲ. ಮಂಗಳೂರು ದಕ್ಷಿಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
