ಮಂಗಳೂರು: ದ.ಕ. ಜಿಲ್ಲಾ ಖಾಝಿ ಅಲ್ಹಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್(77) ಇಂದು (ಜೂ.23) ಬೆಳಗ್ಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಕೆಲವು ಸಮಯದಿಂದ ಅನಾರೋಗಕ್ಕೀಡಾಗಿದ್ದ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರಿಂದು ಕೊನೆಯುಸಿರೆಳೆದಿದ್ದಾರೆ. ಮೃತರು ಪತ್ನಿ, ಮೂವರು ಪುತ್ರರು ಮತ್ತು ಇಬ್ಬರು ಪುತ್ರಿಯರ ಸಹಿತ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಮುಸ್ಲಿಂ ಸಮುದಾಯಕ್ಕೆ ದೀರ್ಘಕಾಲ ಧಾರ್ಮಿಕ ಮಾರ್ಗದರ್ಶನ ನೀಡಿದ ಮುಸ್ಲಿಯಾರ್ ಅವರು ತಮ್ಮ ಜೀವನವನ್ನೆಲ್ಲಾ ಧರ್ಮ, ಶಿಕ್ಷಣ ಹಾಗೂ ಸಮಾಜ ಸೇವೆಗೆ ಸಮರ್ಪಿಸಿ ಸಾವಿರಾರು ಜನರಿಗೆ ದಾರಿದೀಪರಾಗಿದ್ದರು. ಅವರ ಸರಳತೆ, ಆಳವಾದ ಜ್ಞಾನ ಹಾಗೂ ಸಮನ್ವಯದ ಮನೋಭಾವವು ಎಲ್ಲರಿಗೂ ಪ್ರೇರಣೆ.
ಅವರ ಅಗಲಿಕೆ ಮುಸ್ಲಿಂ ಸಮುದಾಯಕ್ಕೆ ಮಾತ್ರವಲ್ಲದೆ ಸಮಸ್ತ ಸಮಾಜಕ್ಕೂ ಅಪಾರ ನಷ್ಟವಾಗಿದೆ. ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಹಾಗೂ ಧಾರ್ಮಿಕ ಮೌಲ್ಯಗಳನ್ನು ಬಲಪಡಿಸುವಲ್ಲಿ ಅವರ ಪಾತ್ರ ಅತ್ಯಂತ ಮಹತ್ವದ್ದಾಗಿತ್ತು ಎಂದು ಕರ್ನಾಟಕ ರಾಜ್ಯ ಆರೋಗ್ಯ ಸಚಿವರಾದ ಯು.ಟಿ. ಖಾದರ್ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
