ಸರ್ಕಾರಿ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಲೇ, ಮನೆಯಲ್ಲಿ ರಾಜಾರೋಷವಾಗಿ ಅಕ್ರಮ ಕ್ಲಿನಿಕ್ ನಡೆಸುತ್ತಿದ್ದ ಆರೋಪಕ್ಕೆ ಒಳಗಾಗಿದ್ದ ಸ್ಟಾಫ್ ನರ್ಸ್ ವಿರುದ್ಧ ಆರೋಗ್ಯ ಇಲಾಖೆ ಶಿಸ್ತುಕ್ರಮ ಜರುಗಿಸಿದೆ. ಆರೋಪಿತ ಸಿಬ್ಬಂದಿ ಜಿ.ಬಿ. ಸುನಿತಾ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸೇವೆಯಿಂದ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.
ಗುಡಿಬಂಡೆ ತಾಲ್ಲೂಕಿನ ಬೀಚಗಾನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಶುಶ್ರೂಷಕಿ (ಸ್ಟಾಫ್ ನರ್ಸ್) ಜಿ.ಬಿ. ಸುನಿತಾ, ಚಿಕ್ಕಬಳ್ಳಾಪುರ ತಾಲ್ಲೂಕಿನ ಪೆರೇಸಂದ್ರ ಗ್ರಾಮದಲ್ಲಿರುವ ತಮ್ಮ ಸ್ವಂತ ನಿವಾಸದಲ್ಲೇ ಯಾವುದೇ ಅಧಿಕೃತ ಪರವಾನಗಿ ಇಲ್ಲದೆ ಅಕ್ರಮವಾಗಿ ಕ್ಲಿನಿಕ್ ತೆರೆದು ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದರು. ಸಂಸದ ಡಾ. ಕೆ. ಸುಧಾಕರ್ ಹಾಗೂ ಶಾಸಕ ಪ್ರದೀಪ್ ಈಶ್ವರ್ ಅವರ ತವರು ನೆಲವಾದ ಪೆರೇಸಂದ್ರದಲ್ಲೇ ಈ ಅಕ್ರಮ ದಂಧೆ ರಾಜಾರೋಷವಾಗಿ ನಡೆಯುತ್ತಿರುವುದು ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು.















